ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆಯಲು ಸರ್ಕಾರ ಆದೇಶಿಸಿರುವ ಹಿನ್ನೆಲೆ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದಾರೆ. ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆದ ರಾಜ್ಯ ಸರ್ಕಾರದ ಆದೇಶ ರದ್ದು ಪಡಿಸಲು ಹಾಗೂ ಸಿಬಿಐ ತನಿಖೆ ಮುಂದುವರೆಸುವಂತೆ ಆದೇಶ ಹೊರಡಿಸುವಂತೆ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಕ್ರಮ ಆದಾಯ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಈ ಕುರಿತಾಗಿ ಸಂಪುಟ ಸಭೆಯ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. 2018ರಲ್ಲಿ ಡಿ.ಕೆ. ಶಿವಕುಮಾರ್ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿ, 2019ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಿಬಿಐ ತನಿಖೆಗೆ ವಹಿಸಲಾಗಿತ್ತು. ಇದರ ವಿರುದ್ಧ ಡಿ.ಕೆ. ಶಿವಕುಮಾರ್ ಕೋರ್ಟ್ ಮೊರೆ ಹೋಗಿದ್ದರು. ಬಳಿಕ ಗೃಹ ಇಲಾಖೆಯಿಂದ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿ ಸಿಬಿಐ ತನಿಖೆಗೆ ನೀಡಿದ್ದ ಆದೇಶ ಹಿಂಪಡೆಯಲು ತೀರ್ಮಾನಿಸಲಾಗಿತ್ತು, ಈ ಸಂಬಂಧ ಯತ್ನಾಳ್ ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಗೃಹ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಸಹಮತ ವ್ಯಕ್ತಪಡಿಸಿದೆ.ಇದೊಂದು ರಾಜಕೀಯ ಪ್ರಕರಣ ಎಂದು ಅಭಿಪ್ರಾಯಪಟ್ಟು ಅನುಮತಿ ಹಿಂಪಡೆಯಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದವು.