ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಯೋಜಿಸಿದ್ದ ಭೋಜನಕೂಟದಲ್ಲಿ ಮೂವರು ಶಾಸಕರು ಭಾಗವಹಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ನೋಟಿಸ್ ನೀಡಲು ಚಿಂತನೆ ನಡೆಸಿದೆ.
ಬೆಳಗಾವಿ ಹೊರವಲಯದ ರೆಸಾರ್ಟ್ ನಲ್ಲಿ ಬುಧವಾರ ರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಔತಣಕೂಟ ಏರ್ಪಡಿಸಿದ್ದು, ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್, ಹೆಚ್. ವಿಶ್ವನಾಥ್ ಭಾಗವಹಿಸಿದ್ದರು.
ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಆಹ್ವಾನದ ಮೇರೆಗೆ ಈ ಶಾಸಕರು ಭೋಜನಕೂಟದಲ್ಲಿ ಭಾಗವಹಿಸಿದ್ದು, ಪಕ್ಷಕ್ಕೆ ಮುಜುಗರ ತಂದಿರುವ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಬಿಜೆಪಿ ಆಂತರಿಕ ವಲಯದಲ್ಲಿ ಕೇಳಿ ಬಂದಿದೆ.
ಪಕ್ಷದ ವರಿಷ್ಠರು ಕೂಡ ಮಾಹಿತಿ ಪಡೆದು ಪಕ್ಷದ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಬಿಜೆಪಿ ಶಾಸಕರ ನಡುವೆ ಸಮನ್ವಯದ ಕೊರತೆ, ಶಾಸಕ ಯತ್ನಾಳ್ ಸ್ವಪಕ್ಷದವರ ವಿರುದ್ಧವೇ ವಾಗ್ದಾಳಿ ನಡೆಸಿರುವುದು, ಮೂವರು ಶಾಸಕರು ಕಾಂಗ್ರೆಸ್ ಔತಣಕೂಟದಲ್ಲಿ ಭಾಗಿಯಾದ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.