ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದ ಕೂಡಲೇ ಐದು ಗ್ಯಾರಂಟಿ ಜಾರಿ ಮಾಡುವ ಭರವಸೆ ನೀಡಲಾಗಿತ್ತು. ಜಾರಿಗೊಳಿಸಲಾದ ನಾಲ್ಕು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಡಿಸೆಂಬರ್ ಅಂತ್ಯದಲ್ಲಿ ಐದನೇ ಗ್ಯಾರಂಟಿ ಯುವನಿಧಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದು, ಇದುವರೆಗೆ 114.54 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. 2700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳು ಕೂಡ ಯಶಸ್ವಿಯಾಗಿವೆ. ಗೃಹಲಕ್ಷ್ಮಿ ಯೋಜನೆ ಅಡಿ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಜಾರಿಗೆ 38,000 ಕೋಟಿ ರೂ. ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದಾರೆ.