ಬೆಂಗಳೂರು : ಮೋದಿ ಪ್ರಧಾನಿಯಾಗಿ ಮುಂದುವರಿದರೆ ‘ಸಂವಿಧಾನ’ ಕೂಡ ಉಳಿಯುವುದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದರು.
ಸಂಸತ್ತಿನಿಂದ ವಿಪಕ್ಷಗಳ 146 ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಮಿನಿ ಸೌಧದ ಬಳಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕೇಂದ್ರ ಸರಕಾರದ ಸರ್ವಾಧಿಕಾರ ಧೋರಣೆಯಿಂದಾಗಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಸಂಸತ್ತಿನಲ್ಲಿ ನಡೆದ ದಾಂಧಲೆಗೆ ಭದ್ರತಾ ವೈಫಲ್ಯ ಕಾರಣ. ಆದರೆ ಗೃಹ ಸಚಿವರ ಸ್ಪಷ್ಟೀಕರಣ ಕೇಳಿದರೆ ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ.
ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮುಂದುವರಿದರೆ ಸಂವಿಧಾನ ಕೂಡ ಉಳಿಯುವುದಿಲ್ಲ. ಮೋದಿಯವರನ್ನು ಪೂಜೆ ಮಾಡಿ ಕುಳಿತುಕೊಳ್ಳುವ ಸ್ಥಿತಿ ಬರಲಿದೆ. ಕೇಂದ್ರದ ಸರ್ವಾಧಿಕಾರ ಧೋರಣೆ ವಿರುದ್ದ ದೇಶದ ಜನತೆ ಹೋರಾಟ ನಡೆಸುವುದು ಅನಿವಾರ್ಯವಾಗಿದೆ.ಮೋದಿ ಪ್ರಧಾನಿಯಾಗಿ ಮುಂದುವರಿದರೆ ಸಂವಿಧಾನ ಕೂಡ ಉಳಿಯುವುದಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು.