ಬೆಂಗಳೂರು: ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಒತ್ತಡ ಹೆಚ್ಚಾಗಿದೆ.
ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಮೊದಲ ಸಭೆಯಲ್ಲಿ ಪಕ್ಷ ಸಂಘಟನೆಗಿಂತ ಹೆಚ್ಚಾಗಿ ಯತ್ನಾಳ್ ಅವರ ಬಗ್ಗೆ ಹೆಚ್ಚಿನ ಚರ್ಚೆ ನಡೆದಿದೆ. ಪಕ್ಷಕ್ಕೆ ಮುಜುಗರ ಆಗುವಂತೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಯತ್ನಾಳ್ ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪದಾಧಿಕಾರಿಗಳು ಪ್ರಶ್ನಿಸಿದ್ದಾರೆ. ವಿಜಯೇಂದ್ರ ಅವರೇ ಪದಾಧಿಕಾರಿಗಳನ್ನು ಸಮಾಧಾನಪಡಿಸಿದರೂ ಕೇಳದ ಪದಾಧಿಕಾರಿಗಳು, ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ನೀಡುತ್ತಿರುವ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ.