ಬೆಂಗಳೂರು: ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯಿಸಿ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನಾ ರ್ಯಾಲಿ ತೀವ್ರ ಸ್ವರೂಪ ಪಡೆದು, ಕಲ್ಲುತೂರಾಟ, ಆಸ್ತಿಪಾಸ್ತಿ ನಷ್ಟ ಉಂಟುಮಾಡಿದ ಹಂತಕ್ಕೂ ತಲುಪಿತ್ತು. ಈ ಹಿನ್ನೆಲೆಯಲ್ಲಿ ಕಾನೂನು ಕೈಗೆತ್ತಿಕೊಂಡ ಆರೋಪದಲ್ಲಿ ಕರವೇ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಬಂಧಿತ ಕರವೇ ಕಾರ್ಯಕರ್ತರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಕಾರ್ಯಕರ್ತರಿಗೆ ಬಂಧನ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕುವಂತೆ ಕರವೇ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಕಾರ್ಯಕರ್ತರ ಬಂಧನ ಖಂಡಿಸಿ ಇಂದು ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಸಿಎಂ ನಿವಾಸ ಹಾಗೂ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ನಿವಾಸ ಹಾಗೂ ಕಚೇರಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.