HomeKarnatakaBIG NEWS : ರಾಜ್ಯಾದ್ಯಂತ ʻಕನ್ನಡ ನಾಮಫಲಕʼ ಕಡ್ಡಾಯ : ರಾಜ್ಯ ಸರ್ಕಾರದಿಂದ ಫೆ. 28...

BIG NEWS : ರಾಜ್ಯಾದ್ಯಂತ ʻಕನ್ನಡ ನಾಮಫಲಕʼ ಕಡ್ಡಾಯ : ರಾಜ್ಯ ಸರ್ಕಾರದಿಂದ ಫೆ. 28 ರ ಗಡುವು

ಬೆಂಗಳೂರು : ರಾಜ್ಯಾದ್ಯಂತ ಅಂಗಡಿ-ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ.

ಇದಕ್ಕೂ ಮೊದಲು 2018ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು ಎಂದರು.

ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದಿದೆ.

ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ.

3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು, ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ.  ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರೇ ಆಗಲಿ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular