ಬೆಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಪರ್ ಕೊಡುಗೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಈ ಬಗ್ಗೆ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರದಿಂದ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಕೇಂದ್ರದ ಪಾಲನ್ನು ಭರಿಸಲು ತೀರ್ಮಾನಿಸಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 40 ಕೋಟಿ ರೂಪಾಯಿ ಅನುದಾನ ಬಳಸಲು ಸಿಎಂ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಕ್ರಿಯಾಯೋಜನೆ ರೂಪಿಸಬೇಕು. ಮೂಲಸೌಕರ್ಯ ಕೊರತೆ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸಿ ಅನುದಾನ ಹಂಚಿಕೆ ಮಾಡಬೇಕೆಂದು ಸಿಎಂ ನಿರ್ದೇಶನ ನೀಡಿದ್ದಾರೆ.
6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದ್ದು, ಬಜೆಟ್ ನಲ್ಲಿ 60 ಕೋಟಿ ರೂ. ಅನುದಾನ ನೀಡಲಾಗಿದೆ. ಕೇಂದ್ರದ ಪಾಲನ್ನು ಭರಿಸುವ ನಿಟ್ಟಿನಲ್ಲಿ ಇಲಾಖಾ ಅನುದಾನದ ಮರು ಹಂಚಿಕೆ ಮೂಲಕ 40 ಕೋಟಿ ರೂ. ಹೆಚ್ಚುವರಿ ಅನುದಾನ ಬಳಕೆಗೆ ಸೂಚಿಸಲಾಗಿದೆ.