ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡುವ ಅಗತ್ಯವಿಲ್ಲ. 60 ವರ್ಷ ಹಾಗೂ ದೀರ್ಘ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಬುಧವಾರದಿಂದ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು.1 ಮತ್ತು 2ನೇ ಕೋವಿಡ್ ಸಂದರ್ಭದಲ್ಲಿ ನೀಡಲಾದ ಲಸಿಕೆಗಳನ್ನೇ ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕೋವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ 30,000 ಡೋಸ್ ಕಾರ್ಬೆವ್ಯಾಕ್ಸ್ ಲಸಿಕೆಯನ್ನು ಸರಬರಾಜು ಮಾಡಿದೆ ಎನ್ನಲಾಗಿದೆ. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು ಎನ್ನಲಾಗಿದೆ.