ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಖಾಸಗಿ ಶಾಲೆಗಳು, ವಿಶ್ವೇಶ್ವರಯ್ಯ ಮ್ಯೂಸಿಯಂ ಬಳಿಕ ಇದೀಗ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಆರೋಪಿಗಳು ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಕರೆ ಮಾಡಿ ಬೆಂಗಳೂರು ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದರು. ತಕ್ಷಣ ಮುಂಬೈ ಎನ್ ಎಸ್ ಇ ಕಚೇರಿ ಅಧಿಕಾರಿಗಳು ತಡರಾತ್ರಿ ಒಂದುಗಂಟೆ ವೇಳೆ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದೆ. ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.