ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಕಮಿಷನರ್ ಸೇರಿ ಮೂವರ ಅಮಾನತಿಗೆ ಶಿಫಾರಸು ಮಾಡಲಾಗಿದೆ.
ಕಾರಿಗನೂರು, ಶಿಕಾರಿ ಕ್ಯಾಂಪ್ ಗ್ರಾಮಗಳಲ್ಲಿ ಕಲುಷಿತ ನೀರು ಸೇವಿ 66 ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಸೀತಮ್ಮ ಎಂಬ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಗ್ರಾಮಗಳಿಗೆ ಭೇಟಿ ನೀಡಿದ ನಂತರ ಜಿಲ್ಲಾಧಿಕಾರಿ ದಿವಾಕರ್ ವರದಿ ನೀಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನ್ ಸೂಚನೆ ಮೇರೆಗೆ ಹೊಸಪೇಟೆ ಕಮಿಷನರ್ ಬಂಡಿವಡ್ಡರ್, ಎಇ ಸತೀಶ್, ಸಹಾಯಕ ಇಂಜಿನಿಯರ್ ಖಾಜಿ ಅವರ ಅಮಾನತಿಗೆ ಶಿಫಾರಸು ಮಾಡಲಾಗಿದೆ. ಕಾರಿಗನೂರು ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆಯಲಾಗಿದ್ದು, ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗಿದೆ.