ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ನಲ್ಲಿ 700 ಕೋಟಿ ರೂ.ನಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ.
ಅಖಿಲ ಕರ್ನಾಟಕ ವಾಹನ ನಂಬರ್ ಪ್ಲೇಟ್ ತಯಾರಕರು ಮತ್ತು ಮಾರಾಟಗಾರರ ಸಂಘದ ಅಧ್ಯಕ್ಷ ಎಸ್.ಎಲ್. ಜಿತೇಂದ್ರ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದು, 2019ರ ಏಪ್ರಿಲ್ 1ಕ್ಕೆ ಮೊದಲು ಖರೀದಿಸಿದ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸಾರಿಗೆ ಇಲಾಖೆ ಆದೇಶದ ಬಳಿಕ 700 ಕೋಟಿ ರೂ.ಗಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.
ಸಾರ್ವಜನಿಕರ ಅನುಕೂಲಕ್ಕೆ ಇರಬೇಕಾದ ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡು ಸುಮಾರು 2 ಕೋಟಿ ಹಳೆ ವಾಹನಗಳ ಮಾಲೀಕರನ್ನು ಹೆಚ್ಚಿನ ದರದಲ್ಲಿ HSRP ಖರೀದಿಸುವಂತಹ ಪರಿಸ್ಥಿತಿ ನಿರ್ಮಿಸಿದ್ದಾರೆ. ಈ ಮೂಲಕ ಸಾರ್ವಜನಿಕ ಹಣವನ್ನು ಸಂಘಟಿತವಾಗಿ ಲೂಟಿ ಮಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.