ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಮಿತಿ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧದ ಪ್ರಕರಣ ರದ್ದು ಮಾಡುವಂತೆ ಕೋರಿ ಯತ್ನಾಳ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ. ಗದಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಕಾಂಗ್ರೆಸ್ ಪಕ್ಷ ಭಜರಂಗದಳವನ್ನು ನಿಷೇಧಿಸಿದ್ದಲ್ಲಿ ಆ ಪಕ್ಷದವರಿಗೆ ಎಲ್ಲಾ ಹಿಂದೂಗಳು ಬಹಿಷ್ಕಾರ ಹಾಕುತ್ತಾರೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು.