ಬೆಳಗಾವಿ : ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದ ಬಳಿ ನಿರ್ಮಾಣಗೊಂಡಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಗೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮತ್ತು ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಮತ್ತು ಭೋಜನಾಲಯವನ್ನು ಉದ್ಘಾಟಿಸಿದರು.
ಈ ವೇಳೆ ರೇವಣಸಿದ್ದೇಶ್ವರ ಸಿಂಹಾಸನಾಧೀಶ್ವರ ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಶಾಸಕರಾದ ಮಹಂತೇಶ್ ಕೌಜಲಗಿ, ಎಚ್.ವೈ.ಮೇಟಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ನಿರ್ಮಾಣ ಮಾಡಲಾಗಿದೆ. ವಸತಿ ಸೌಲಭ್ಯವನ್ನು ಈ ವಸತಿ ಶಾಲೆ ಒಳಗೊಂಡಿದೆ. ಸುಸಜ್ಜಿತ ಗ್ರಂಥಾಲಯ, ಭೋಜನಾಲಯ, ಕ್ರೀಡಾಂಗಣ ಸೇರಿ ವಿವಿಧ ಸೌಲಭ್ಯಗಳನ್ನು ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಒಳಗೊಂಡಿದೆ.