ಬೆಂಗಳೂರು : 545 ಪಿಎಸ್ಐ ನೇರ ನೇಮಕಾತಿ ಸಂಬಂಧ ಮಂಗಳವಾರ ಮರುಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸಕಲ ಸಿದ್ಧತೆ ನಡೆಸಿದೆ.
ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮೊದಲ ಪೇಪರ್ ಮತ್ತು ಮಧ್ಯಾಹ್ನ 1ರಿಂದ 2.30ರವರೆಗೆ ಎರಡನೇ ಪೇಪರ್ ಗೆ ಲಿಖಿತ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿ ಮುಚ್ಚುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಪ್ರತೀ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳು ಮತ್ತು ಇಬ್ಬರು ಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ ಒಟ್ಟು 6 ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.ಈ ಹಿಂದೆ ಪೊಲೀಸ್ ನೇಮಕಾತಿ ವಿಭಾಗದಿಂದ 545 ಪಿಎಸ್ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಈ ಪರೀಕ್ಷೆಯಲ್ಲಿ ಅವ್ಯವಹಾರ ನಡೆದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ಪ್ರಕರಣವನ್ನು ವಹಿಸಿತ್ತು. ಸಿಐಡಿ ತನಿಖೆಯಲ್ಲಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿತ್ತು. ಹೀಗಾಗಿ ಸರ್ಕಾರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ ಮರುಪರೀಕ್ಷೆನಡೆಸುವುದಾಗಿ ಘೋಷಿಸಿತ್ತು.