ಮೈಸೂರು : ಒಂದು ವಾರದೊಳಗೆ ರೈತರ ಖಾತೆಗೆ ಬರ ಪರಿಹಾರದ ಹಣ ಜಮಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪಿರಿಯಾಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದ ರೈತರಿಗೆ ಮೊದಲ ಕಂತಿನ ಬರ ಪರಿಹಾರ ವಿತರಣೆ ಮಾಡಲು ರೂ. 550 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದೇವೆ. ಇನ್ನೊಂದು ವಾರದೊಳಗೆ ರೈತರ ಖಾತೆಗಳಿಗೆ ಈ ಹಣ ಜಮೆ ಆಗುತ್ತದೆ. ಇಂದಿನವರೆಗೆ ನಮ್ಮ ಸರ್ಕಾರ ದನಕರುಗಳಿಗೆ ಹಾಗೂ ಜನಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಭಾಯಿಸಿದ್ದೇವೆ. 550 ಕೋಟಿ ರೂ.ಗಳನ್ನು ರೈತರಿಗೆ ಪರಿಹಾರವಾಗಿ ಈವರೆಗೆ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದೇವೆ. ಇನ್ನೊಂದು ವಾರದೊಳಗೆ ಎಲ್ಲಾ ರೈತರಿಗೂ ಮೊದಲನೇ ಕಂತನ್ನು ತಲುಪಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಡಿ.23 ರಂದು ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ ಇದುವರೆಗೆ ಹಣ ಬಂದಿಲ್ಲ. ರಾಜ್ಯದ ರೈತರು ಬರಗಾಲದಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ, ಕೂಡಲೇ ಬಿಡುಗಡೆ ಮಾಡಿ ಎಂದು ಅವರಿಗೆ ನೆನಪು ಮಾಡಿದ್ದೇನೆ ಎಂದು ಸಿಎಂ ಹೇಳಿದರು.