ಮೈಸೂರು : ರಾಜ್ಯದ ಒಂದು ಕೋಟಿ 30 ಲಕ್ಷ ಕುಟುಂಬಗಳ ನಾಲ್ಕೂವರೆ ಕೋಟಿ ಜನರಿಗೆ ಪ್ರತೀ ತಿಂಗಳು 4 ರಿಂದ 6 ಸಾವಿರ ರೂಪಾಯಿ ಕೈ ಸೇರುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆ – ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆಯೋದು, ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ನಮ್ಮ ಸರ್ಕಾರದ ಸಂಸ್ಕಾರ. ಬಿಜೆಪಿ ಕೊಟ್ಟ ಮಾತುಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಜನ ಜಾನವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ, ಜನರು ಗುಳೆ ಹೋಗದಂತೆ ತಡೆದಿದ್ದೇವೆ. ಇದು ನಮ್ಮ ಸಾಧನೆ ಎಂದರು.
ರಾಜ್ಯದ ಒಂದು ಕೋಟಿ 30 ಲಕ್ಷ ಕುಟುಂಬಗಳ ನಾಲ್ಕೂವರೆ ಕೋಟಿ ಜನರಿಗೆ ಪ್ರತೀ ತಿಂಗಳು 4 ರಿಂದ 6 ಸಾವಿರ ರೂಪಾಯಿ ಕೈ ಸೇರುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ. ಇಲ್ಲಿಯವರೆಗೂ 139 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ಜಮೆ ಆಗುತ್ತಿದೆ. ನಾವು ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.
ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅದರಲ್ಲಿ ವಿಫಲರಾದರು. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆಗಲಿಲ್ಲ, ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದರು.
ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ರಾಮನನ್ನು ಭಜಿಸುತ್ತೇವೆ. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿಯನ್ನು ಕ್ಷಮಿಸಬೇಡಿ, ಬೆಂಬಲಿಸಬೇಡಿ ಎಂದು ಹೇಳಿದರು.