ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಈ ಬಗ್ಗೆ ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್ ಮಾಹಿತಿ ನೀಡಿದ್ದು, ಮಯಾಂಕ್ ಅಪಾಯದಿಂದ ಪಾರಾಗಿದ್ದಾರೆ ಮತ್ತು ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.
ವಿಮಾನದಲ್ಲಿ ಶೌಚಾಲಯ ಸ್ವಚ್ಛತೆಗೆ ಬಳಕೆ ಮಾಡುವ ರಾಸಾಯನಿಕವನ್ನು ನೀರೆಂದು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಭಾರತ ತಂಡದ ಕ್ರಿಕೆಟಿಗ ಹಾಗೂ ಕನ್ನಡಿಗ ಮಯಾಂಕ್ ಅಗರ್ವಾಲ್ ಅಪಾಯದಿಂದ ಪಾರಾಗಿದ್ದಾರೆ. ಅಗರ್ವಾಲ್ ವಿಮಾನದಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ನೀರಿನ ಬಾಟಲಿ ಎಂದು ಭಾವಿಸಿ ರಾಸಾಯನಿಕ ಸೇವಿಸಿದ್ದಾರೆ. ತಕ್ಷಣವೇ ಅವರಿಗೆ ಗಂಟಲು ಮತ್ತು ಬಾಯಲ್ಲಿ ಉರಿಯ ಅನುಭವವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಣಜಿ ಪಂದ್ಯಕ್ಕಾಗಿ ತ್ರಿಪುರಾದಲ್ಲಿದ್ದ ಅವರು, ವಿಮಾನದಲ್ಲಿ ವಾಪಸ್ ಆಗುತ್ತಿದ್ದಾಗ ತೀವ್ರವಾಗಿ ಅಸ್ವಸ್ಥರಾಗಿದ್ದರು.