ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರಪತಿ ಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಪ್ರಕಟಿಸಿದೆ. 2015 ರಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ದಿನೇಶ್ ಕುಮಾರ್ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು 24 ದಿನ ಮುಖ್ಯ ನ್ಯಾಯಮೂರ್ತಿಯಾಗಿರುತ್ತಾರೆ.
ಜನವರಿ 19ರಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಪ್ರಸನ್ನ ಬಿ. ವರಾಳೆ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಲಾಗಿತ್ತು. ವರಾಳೆ ಅವರಿಗೆ ಪದೋನ್ನತಿ ನೀಡಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯನ್ನಾಗಿ ಬಡ್ತಿ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ದಿನೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ.
ನ್ಯಾಯಮೂರ್ತಿಯಾಗಿ ನ್ಯಾಯಾಂಗ ಮತ್ತು ಆಡಳಿತಾತ್ಮಕ ವಿಭಾಗದಲ್ಲಿ ಸಾಕಷ್ಟು ಅನುಭವ ಹೊಂದಿರುವ ದಿನೇಶ್ ಕುಮಾರ್ ಫೆಬ್ರವರಿ 24ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.