ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರದ ಮಧ್ಯಂತರ ಬಜೆಟ್ ಬಗ್ಗೆ ನಮಗೆ ಯಾವುದೇ ನಿರೀಕ್ಷೆಗಳಿಲ್ಲ. ಕಳೆದ ಹತ್ತು ವರ್ಷಗಳಿಂದ ಕರ್ನಾಟಕಕ್ಕೆ, ಕನ್ನಡಿಗರಿಗೆ ಕೇವಲ ಅನ್ಯಾಯವಾಗುತ್ತಿದೆ ಎಂದು ಕಿಡಿಕಾರಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಭರವಸೆ ನೀಡಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಕಳೆದ 50 ವರ್ಷಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗುತ್ತಿದೆ ಎಂದರು.
ಯುದ್ಧಗ್ರಸ್ಥ ಇಸ್ರೇಲ್ ಗೆ ನಮ್ಮ ದೇಶದ 10,000 ಯುವಕರು ಉದ್ಯೋಗ ಅರಸಿ ಹೋಗುತ್ತಿದ್ದಾರೆ. ಅಂದರೆ ನಮ್ಮಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟಿದೆ ಎಂಬುದರ ಗಂಭೀರತೆ ಇದು. ಕೇಂದ್ರ ಸರ್ಕಾರ ಮಹಿಲಾ ಸಬಲೀಕರಣದ ಮಾತುಗಳನ್ನಾಡುತ್ತದೆ, ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳುತ್ತದೆ. ವಿದೇಶಿ ಬಂಡವಾಳ ಹೆಚ್ಚುವುದಾಗಿ ಹೇಳುತ್ತದೆ. ಆದರೆ ವಾಸ್ತವದಲ್ಲಿ ರಾಜ್ಯದಲ್ಲಿ ಯಾವುದೂ ಜಾರಿಗೊಳ್ಳಲಿಲ್ಲ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ನೀಡಿದ ಕೊಡುಗೆಯಾದರೂ ಏನು? ಎಂದು ಯೋಚಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.