ಶಿವಮೊಗ್ಗ: ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ.ಮತ್ತು ಉನ್ನತ ಶಿಕ್ಷಣ ಹಾಗೂ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಶೇಷ ಕಲಿಕಾ ತರಗತಿಗಳನ್ನು ಸರ್ಕಾರದ ವತಿಯಿಂದಲೇ ನಡೆಸಲು ಮುಂಬರುವ ಶೈಕ್ಷಣಿಕ ಸಾಲಿನಿಂದ ಕ್ರಮ ವಹಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕ್ರಾಶ್ ಕೋರ್ಸ್- ವಿಶೇಷ ತರಬೇತಿಗಳಿಂದಾಗಿ ಸಾಮಾನ್ಯ ಕುಟುಂಬದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂವಾಗಲಿದೆ ಎಂದು ತಿಳಿಸಿದರು.
ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಮಕ್ಕಳಿಗೆ ಸಮವಸ್ತ್ರ, ಶೂ, ಪಠ್ಯಪುಸ್ತಕ, ಮೊಟ್ಟೆ, ಬಾಳೆಹಣ್ಣು, ಚುಕ್ಕಿ, ಹಾಲು ಜೊತೆಗೆ ಪೌಷ್ಠಿಕ ಆಹಾರ ರಾಗಿ ಮಾಲ್ಟ್‍ನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.
ಎಸ್.ಎಸ್.ಎಲ್.ಸಿ ಮತ್ತು ಪಿ.ಯು. ಅನುತ್ತೀರ್ಣ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣ ಮುಂದುವರೆಸಲು ಅನುಕೂಲವಾಗುವಂತೆ ಮೂರು ಬಾರಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಿಂದಾಗಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿಯುತ್ತಿದ್ದ ಸುಮಾರು 40 ಸಾವಿರ ಮಕ್ಕಳು ಶಿಕ್ಷಣದ ಮುಖ್ಯವಾಹಿನಿಯಲ್ಲಿ ಮುಂದುವರೆಯುತ್ತಿದ್ದಾರೆ ಎಂದರು.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರನ್ನು ಒದಗಿಸಲು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಅವಧಿಯಲ್ಲಿ ಅಲ್ಲಿನ ಶಿಕ್ಷಕರು ಮಕ್ಕಳಿಗೆ ವಿಶೇಷ ಕಲಿಕಾ ತರಗತಿಗಳನ್ನು ಮಾಡುವಂತೆ ಮನವಿ ಮಾಡಿದರು.