ಗದಗ: ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ-ಜಿಮ್ಸ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದರು. ಆಸ್ಪತ್ರೆಯಲ್ಲಿ ಮೆಡಿಕಲ್ ವಿದ್ಯಾರ್ಥಿಗಳ ಬೇಜವಾಬ್ದಾರಿ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ರೀಲ್ಸ್ ಮಾಡಿದ್ದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಜಿಮ್ಸ್ ಆಸ್ಪತ್ರೆಯಲ್ಲಿ ರೀಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 38 ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಹೌಸ್ ಮ್ಯಾನ್ ಶಿಪ್ ಪೋಸ್ಟಿಂಗ್ (ಪ್ರಾಯೋಗಿಕ ತರಬೇತಿ) ಅನ್ನು 10 ದಿನಗಳ ಕಾಲ ವಿಸ್ತರಿಸಿ ಶಿಕ್ಷೆ ನೀಡಲಾಗಿದೆ.
ವೈದ್ಯಕೀಯ ವಿದ್ಯಾರ್ಥಿಗಳು ಆಸ್ಪತ್ರೆಯ ಆವರಣದಲ್ಲಿಯೇ ಕನ್ನಡ , ತೆಲುಗು, ಹಿಂದಿ ಸಿನಿಮಾಗಳ ಜನಪ್ರಿಯ ಹಾಡುಗಳಿಗೆ ಡಾನ್ಸ್ ಮಾಡಿದ್ದರಲ್ಲದೇ, ಕೆಲ ದೃಶ್ಯಗಳನ್ನು ಚಿತ್ರೀಕರಿಸಿ ಅಭಿನಯಿಸಿದ್ದರು. ಈ ರೀಲ್ಸ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮೆಡಿಕಲ್ ವಿದ್ಯಾರ್ಥಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಲ್ಯಾಬ್ ಹಾಗೂ ಆಪರೇಷನ್ ಥಿಯೇಟರ್ ಗಳನ್ನು ಮನರಂಜನಾ ವಿಡಿಯೋ ಚಿತ್ರೀಕರಣಕ್ಕೆ ಬಳಸಿಕೊಂಡಿದ್ದಕ್ಕೆ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದರು.
ಇದೀಗ ಜಿಮ್ಸ್ ನಿರ್ದೇಶಕ ಬಸವರಾಜ್ ಬೊಮ್ಮನಹಳ್ಳಿ ರೀಲ್ಸ್ ಮಾಡಿದ್ದ 38 ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.