![](https://kannadadunia.com/wp-content/uploads/2021/04/vidhana-soudha-1-800x445-1.jpg)
ಬೆಂಗಳೂರು : ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 628 ಕೋಟಿ ರೂ. ಹಣವನ್ನು ಬರಪರಿಹಾರವಾಗಿ ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ 2000 ಕೋಟಿ ರೂ. ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ. 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗೆ ಹಣ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ರಾಜ್ಯದ 223 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿದ್ದು, ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ, ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಗಳ ಖಾತೆಗಳಿಗೆ ರೂ 870 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಿಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ರೈತರ ಹೆಸರು ಬಿಟ್ಟು ಹೋಗಿದ್ದಲ್ಲಿ, ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ಭೇಟಿ ನೀಡಿ, ಹೆಸರು ಸೇರ್ಪಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.