ಹಾವೇರಿ: ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಕುರಿತ ತನಿಖೆಯನ್ನು ಸರ್ಕಾರ ಅನಗತ್ಯ ವಿಳಂಬ ಮಾಡಿತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿದೆ. ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ಹಾಗಾಗಿ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲ ಹರಣ ಮಾಡುತ್ತಿರುವುದನ್ನು ಕಂಡು 6 ವಾರದಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರದಲ್ಲಿ ಹಣ ಇಲ್ಲದಿರುವುದಕ್ಕೆ ಈ ರೀತಿಯ ಕಮಿಷನ್ ಮಾಡಿಕೊಂಡು ಕುಳಿತಿದ್ದೀರಿ, 6 ವಾರದಲ್ಲಿ ವರದಿ ನೀಡದಿದ್ದರೆ, ಹಣ ಬಿಡುಗಡೆಗೆ ನಾವೇ ನಿರ್ದೇಶನ ನೀಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಹೀಗಾಗಿ ಅವರು ಸರ್ಕಾರದ ಪರವಾಗಿ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ನಿಲ್ಲಿಸಿಬಿಟ್ಟಿದ್ದಾರೆ, ಅಭಿವೃದ್ಧಿ ಶೂನ್ಯವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಬಾಯಲ್ಲಿ ಹಸಿ ಸುಳ್ಳನ್ನು ಹೇಳಿಸಿದ್ದಾರೆ. ಹಿಂದಿನ ಸರ್ಕಾರದ ಸಾಧನೆಗಳನ್ನು ತನ್ನ ಸಾಧನೆ ಎಂದು ಸರ್ಕಾರ ಹೇಳಿಕೊಂಡಿದೆ. ಈ ಸರಕಾರ ಯಾವುದೇ ಸಾಧನೆ ಮಾಡಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದು ಕಿಡಿಕಾರಿದರು.