ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಇ-ಸ್ವತ್ತು ಸಮಸ್ಯೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ನ ಹೆಚ್.ಡಿ. ತಮ್ಮಯ್ಯ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಇ-ಸ್ವತ್ತು ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಸಚಿವರ ಜೊತೆಗೆ ಜಿಪಂ ಸಿಇಒಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿಲೇಜ್ ಪಂಚಾಯತ್ ಚೇರ್ಮನ್ ಗ್ರಾಮಾಠಾಣಾ ಮತ್ತು ಆಶ್ರಯ ಯೋಜನೆ ಎಂದು ಪಹಣಿಯಲ್ಲಿ ನಮೂದಾಗಿದೆ. ಆ ಜಾಗದಲ್ಲಿ ಸಾರ್ವಜನಿಕರು ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆ. ಈ ಜಿಲ್ಲೆಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ವಿತರಿಸುವುಕ್ಕೆ ವಿನಾಯಿತಿ ನೀಡಿ ನಮೂನೆ 11 ಬಿಯನ್ನು ಕೈ ಬರಹದ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.