ಬೆಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು, ನಿರುದ್ಯೋಗಿ ಯುವಕ ಯುವತಿಯರು ಭಾಗವಹಿಸಬಹುದು ಎಂದು ಬಳ್ಳಾರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ವಿವಿಧ ಇಲಾಖೆಗಳ (ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಇತ್ಯಾದಿ) ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಸಮಿತಿಯ ಮಾರ್ಗದರ್ಶನದಂತೆ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಸುಮಾರು 500 ಕಂಪನಿಗಳು ಭಾಗವಹಿಸಿ ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಈ ಮೇಳದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಎಲ್ಲಾ ವಿದ್ಯಾರ್ಹತೆಯ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು ಮತ್ತು ಕಂಪನಿಗಳು ಈ https://udyogamela.skillconnect.kaushalkar.com/ ವೆಬ್ಸೈಟ್ನಲ್ಲಿ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳುವುದರ ಮೂಲಕ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.