ಹಿರಿಯ ಸಾಹಿತಿ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಯಾಗಿರುವ ಅವರು ಪತ್ರಿಕಾ ಬರಹ, ಕತೆ, ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ ಇವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಗಳಿಸಿದ್ದರು. ಶಬ್ದಗಳು (1973), ಸೌಮ್ಯ (1978), ಮನೆ, ರಾಮಯಜ್ಞ, ನಿರಂತರ, ಅಬ್ರಾಹ್ಮಣ, ಅಮುಕ್ತ, ಅವಿಭಕ್ತರು, ಕರ್ಮಣ್ಯೇ ವಾಧಿಕಾರಸ್ತೇ, ಕೂಪ, ಪೂಜಾರಿ, ಬಿಸಿಲುಗುದುರೆ ಸೇರಿ ಹಲವು ಕಾದಂಬರಿ, ಕೃತಿಗಳನ್ನು ರಚಿಸಿದ್ದಾರೆ.
ಕೆ ಟಿ ಗಟ್ಟಿಯವರು ಕಾಸರಗೋಡಿನ ಹೈಯರ್ ಎಲಿಮೆಂಟರಿ ಶಾಲೆಯಲ್ಲಿ ಕ್ರಮಬದ್ಧವಾಗಿ ಕಲಿತದ್ದು ಎಂಟನೆಯ ತರಗತಿಯವರೆಗೆ ಮಾತ್ರ. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದ ನಂತರ ಕಾಸರಗೋಡಿನ ಚಳುವಳಿಯಲ್ಲಿ ಬಾಗಿಯಾದರು . ನಂತರ ಪಿ.ಯು. ಹಾಗೂ ಬಿ.ಎ. ಪದವಿಗಳನ್ನು ಕೇರಳ ವಿಶ್ವವಿದ್ಯಾಲಯದಿಂದ ಪಡೆದರು. ಎರಡು ವರ್ಷಗಳ ಶಿಕ್ಷಕರ ತರಬೇತಿ ಪಡೆದದ್ದು ಮಾಯಿಪ್ಪಾಡಿಯ ಸರಕಾರಿ ಬೇಸಿಕ್ ಟ್ರೈನಿಂಗ್ ಶಾಲೆಯಿಂದ. ತಲಚೇರಿಯ ಸರಕಾರಿ ಟ್ರೈನಿಂಗ್ ಕಾಲೇಜಿನಿಂದ ಒಂದು ವರ್ಷದ ಬಿ.ಎಡ್. ಪದವಿ ಪಡೆದ ಗಟ್ಟಿಯವರು ಶಿಕ್ಷಕರಾಗಿ ಸೇರಿದ್ದು ಕಾಸರಗೋಡಿದ ಸರಕಾರಿ ಪ್ರೌಢಶಾಲೆಯಲ್ಲಿ. ಬಿಡುವಿನ ವೇಳೆಯಲ್ಲಿ ಖಾಸಗಿಯಾಗಿ ಕುಳಿತು ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸ್ನಾತಕೋತ್ತರ ಪದವಿ ಪಡೆದರು. ೧೯೬೮ರಲ್ಲಿ ಮಣಿಪಾಲದ ಎಂ.ಐ.ಟಿ. ಸಂಸ್ಥೆ ಸೇರಿ ಆರು ವರ್ಷಗಳ ಕಾಲ ಇಂಗ್ಲಿಷ್ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದರ ಜೊತೆಗೆ ಒಂದು ವರ್ಷ ಉಡುಪಿಯ ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲೂ ಅಧ್ಯಾಪಕರಾಗಿ ಸೇವೆಸಲ್ಲಿಸಿದರು.