ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆ.ಎಫ್.ಡಿ.)ಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ವಿಧಾನ ಮಂಡಲ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ್ದು, ಪ್ರತಿಕ್ರಿಯೆ ನೀಡಿದ ಸಚಿವರು, 2019 ರಲ್ಲಿ ನೀಡಿದ ಮಾದರಿಯಲ್ಲಿ ಕೆ.ಎಫ್.ಡಿ.ಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರ ಬದ್ಧವಾಗಿದೆ. ಈಗಾಗಲೇ ಅಧಿಕಾರಿಗಳ ಸಭೆ ನಡೆಸಿದ್ದು, ಮಲೆನಾಡು ಭಾಗದ ಶಾಸಕರೊಂದಿಗೆ ಚರ್ಚೆ ನಡೆಸಲಾಗುವುದು. ಲಸಿಕೆ ಸಿದ್ಧಪಡಿಸಲು ಸಂಸ್ಥೆಯೊಂದು ಮುಂದೆ ಬಂದಿದ್ದು, ಮುಂದಿನ ಸಾಲಿಗೆ ಲಸಿಕೆ ಸಿಗಲಿದೆ. 9 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಹೇಳಿದ್ದಾರೆ.
2019 ರಲ್ಲಿ ಮೃತರ ಕುಟುಂಬಗಳಿಗೆ 2 ಲಕ್ಷ ರೂ ಮಂಜೂರು ಮಾಡಲಾಗಿತ್ತು. ಈಗ ಪರಿಹಾರದ ಬಗ್ಗೆ ಇನ್ನೂ ನಿರ್ಧರಿಸಿಲ್ಲ. 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಡಿ.ಎಸ್. ಅರುಣ್ ಕೋರಿದ್ದಾರೆ.