ಬೆಂಗಳೂರು : ವಿಧಾನಸಭೆಯಲ್ಲಿ ಗುರುವಾರ ನಿನ್ನೆ 5 ಪ್ರಮುಖ ವಿಧೇಯಕಗಳಿಗೆ ಅಂಗೀಕಾರ ಸಿಕ್ಕಿದೆ. ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ ಸೇರಿ ಐದು ಪ್ರಮುಖ ವಿಧೇಯಕಗಳಿಗೆ ಅಂಗೀಕಾರ ಸಿಕ್ಕಿದೆ.
1) ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ – 2024
2) ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕ – 2024
3) ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ – 2024
4) ಕರ್ನಾಟಕ ಸ್ಟಾಂಪ್ (ತಿದ್ದುಪಡಿ) ವಿಧೇಯಕ – 2024
5) ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ – 2024
ಅದೇ ರೀತಿ ತೆರಿಗೆ ಪಾಲಿನ ಸಮಾನ ಹಂಚಿಕೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರಗೊಂಡಿತು. ರಾಜ್ಯದ ಅಭಿವೃದ್ಧಿ ಮತ್ತು ನಾಗರಿಕರ ಹಿತ ರಕ್ಷಣೆಗಾಗಿ ಆರ್ಥಿಕ ಸಂಪನ್ಮೂಲಗಳ ಸಮಾನ ಹಂಚಿಕೆಯ ನಿಲುವನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ಕರ್ನಾಟಕದ ಜನತೆಯ ಹಿತರಕ್ಷಣೆಯ ವಿಷಯದಲ್ಲಿ ಯಾವುದೇ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.
ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನೀಡಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಎರಡನೇ ನಿರ್ಣಯದಲ್ಲಿ ಸಮರ್ಥಿಸಿಕೊಂಡಿದ್ದು, ʼಈ ವಿಷಯದಲ್ಲಿ ಕೇಂದ್ರ ಸರ್ಕಾರದ ಕ್ರಮಗಳು ರೈತ ವಿರೋಧಿಯಾಗಿವೆ. ಆ ಕಾರಣಕ್ಕಾಗಿಯೇ ರೈತರಿಗೆ ಎಂಎಸ್ಪಿ ದೊರಕುತ್ತಿಲ್ಲʼ ಎಂದು ರಾಜ್ಯ ಸರ್ಕಾರ ಹೇಳಿದೆ.