![](https://kannadadunia.com/wp-content/uploads/2020/05/sslc-result_710x400xt.jpg)
ಬೆಂಗಳೂರು : ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ.
ಅವರು ಬೆಂಗಳೂರಿನ ಮಲ್ಲೇಶ್ವರಂ 18 ನೇ ಅಡ್ಡ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಮುಂಬರುವ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯ ಸಿದ್ಧತೆಗಳ ಕುರಿತು ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿ, ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿ ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯುವಂತೆ ಪ್ರೋತ್ಸಾಹಿಸಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದರು.
ಇನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದೇ ಮೊದಲ ಬಾರಿಗೆ ಪೂರಕ ಪರೀಕ್ಷೆಗಳಲ್ಲಿ ಮಹತ್ತರ ಬದಲಾವಣೆ ಮಾಡಿದ್ದು “ಮೂರು ಬಾರಿ ಪರೀಕ್ಷೆ” ಎಂಬ ಹೊಸ ಯೋಜನೆಯ ಕುರಿತು ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಯೋಜನೆಯಲ್ಲಿ ಮೊದಲ ಪರೀಕ್ಷೆಯು ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿದೆ. ಅನುತ್ತೀರ್ಣರಾದ ಅಥವಾ ಫಲಿತಾಂಶ ತೃಪ್ತಿಕರವಾಗಿರದ ವಿದ್ಯಾರ್ಥಿಗಳು ಉಳಿದೆರಡು ಪರೀಕ್ಷೆಗಳಿಗೆ ಹಾಜರಾಗಲು ಹೆಚ್ಚುವರಿಯಾಗಿ ಅವಕಾಶ ನೀಡಲಾಗಿದೆ. ವಿಶೇಷವೆಂದರೆ ಮೂರು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಅಂಕ ಪಟ್ಟಿಯನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.