ಬೆಂಗಳೂರು: ಫೆಬ್ರವರಿ 28 ರವರೆಗೆ ಬಜೆಟ್ ಅಧಿವೇಶನ ಮುಂದುವರೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಧಾನಸೌಧ ಸುತ್ತಮುತ್ತ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶಿಸಿದ್ದಾರೆ.
ಫೆಬ್ರವರಿ 27ರಂದು ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಫೆಬ್ರವರಿ 28 ರ ವರೆಗೆ ಅಧಿವೇಶನ ನಡೆಯಲಿದ್ದು, ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು, ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಮೊದಲಾದ ಪ್ರತಿಭಟನೆ ಹಮ್ಮಿಕೊಳ್ಳುವ ಸಾಧ್ಯತೆ ಇದೆ.
ಅಧಿವೇಶನದ ಕಲಾಪಗಳು ಸುಗಮವಾಗಿ ನಡೆಯುವ ಉದ್ದೇಶದಿಂದ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹೇಳಲಾಗಿದೆ.