ನವದೆಹಲಿ : ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ 2022 ರ ಅಕ್ಟೋಬರ್ ನಲ್ಲಿ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಕ್ರಿಶ್ಚಿಯನ್ನರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ಅಣ್ಣಾಮಲೈ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.
ದ್ವೇಷ ಭಾಷಣ ಪ್ರಕರಣದಲ್ಲಿ ತನ್ನ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿದ ಮದ್ರಾಸ್ ಹೈಕೋರ್ಟ್ ಫೆಬ್ರವರಿ 8 ರ ಆದೇಶದಿಂದ ತನ್ನ ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಅಣ್ಣಾಮಲೈ ಅವರ ಮನವಿಯಲ್ಲಿ ಹುರುಳಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಕಂಡುಕೊಂಡು ಅದಕ್ಕೆ ಅನುಮತಿ ನೀಡಿತು. ಅಣ್ಣಾಮಲೈ ಅವರ ಹೇಳಿಕೆಗಳು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153-ಎ (ಧರ್ಮ, ಜನಾಂಗ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ವಿಚಾರಣೆಯ ಸಮಯದಲ್ಲಿ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಆ ಮೂಲಕ ಅವರ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿದೆ.