ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಬಲ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಇದೀಗ ಬಿಜೆಪಿ ಸೇರ್ಪಡೆ ವಿಚಾರದಿಂದ ಹಿಂದೆ ಸರಿದಿದ್ದು, ಬಂಡಾಯ ಅಭ್ಯರ್ಥಿಯಾಗಿ ನಿಲ್ಲುವುದಾಗಿ ಪ್ರಕಟಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಅರುಣ್ ಕುಮಾರ್ ಪುತ್ತಿಲ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿಯೂ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ ಎಂದು ಪ್ರಸನ್ನ ಮಾರ್ತ ಘೋಷಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲಿ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧವೇ ಅಡಳಿತ ವಿರೋಧಿ ಅಲೆ ಎದ್ದಿದ್ದು, ಸ್ವಪಕ್ಷದ ಕಾರ್ಯಕರ್ತರೇ ಸಂಸದರ ವಿರುದ್ಧ ತಿರುಗಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ನಾಯಕರು ಹಾಗೂ ವರಿಷ್ಠರು ಹೊಸ ಅಭ್ಯರ್ಥಿ ಹುಡುಕಾಟದಲ್ಲಿರುವಾಗಲೇ ಅರುಣ್ ಕುಮಾರ್ ಪುತ್ತಿಲ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.