ಬೆಂಗಳೂರು : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪೊಲೀಸ್ ಆಯುಕ್ತ ದಯಾನಂದ್ ‘ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕಾಗಿ ಕೋರಿದೆ ಎಂದು ಅವರು ಪ್ರಕಟಣೆ ಹೊರಡಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ರಾಮೇಶ್ವರಂ ಕೆಫೆ ‘ಬಾಂಬ್ ಬ್ಲಾಸ್ಟ್ ಪ್ರಕರಣ ‘ಸಿಸಿಬಿ’ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಘಟನೆ ಸಂಬಂಧ ತನಿಖಾಧಿಕಾರಿಯಾಗಿ ಎಸ್ಐ ನವೀನ್ ಕುಲಕರ್ಣಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಪ್ರಕರಣದ ತನಿಖೆಯನ್ನು ಹೆಚ್ ಎ ಎಲ್ ಪೊಲೀಸ್ ಠಾಣೆಯಿಂದ ಸಿಸಿಬಿಗೆ ವರ್ಗಾಯಿಸಿ ಕಮಿಷನರ್ ದಯಾನಂದ್ ಆದೇಶಿಸಿದ್ದಾರೆ.