ಬೆಂಗಳೂರು : ಪ್ರಸಕ್ತ ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮಾರ್ಚ್ 9ಕ್ಕೆ ಬದಲಾಗಿ ಮಾರ್ಚ್ 16ಕ್ಕೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ತಿಳಿಸಿದೆ.
ಮಾ. 9ರಂದು ನಿಗದಿಯಾಗಿದ್ದ ಪ್ರಸಕ್ತ ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮಾ.16ಕ್ಕೆ ಮುಂದೂಡಲಾಗಿದೆ ಎಂದು ಕೆಎಸ್ಎಲ್ ಎಸ್ಎ ಸದಸ್ಯ ಕಾರ್ಯದರ್ಶಿ ಜೈಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ.16ರಂದು ನಡೆಯಲಿರುವ ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿಯಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಪಕ್ಷಗಾರರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಲೋಕ ಅದಾಲತ್ನಲ್ಲಿ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿ, ಜಲಮಂಡಳಿ ಇನ್ನಿತರ ನ್ಯಾಯಾಲಯಕ್ಕೆ ಬರಬಹುದಾದ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಲಾಗುತ್ತದೆ. ಈ ಪ್ರಕರಣಗಳಲ್ಲಿ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ತೀರ್ಪು ನೀಡಲಾಗುವುದು. ಅಂತಹ ತೀರ್ಪುಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್ ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ, ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಸಮಯ ಉಳಿತಾಯವಾಗುತ್ತದೆ. ಶೀಘ್ರವಾಗಿ ನ್ಯಾಯ ಪಡೆಯಲು ಸಹ ಇದರಿಂದ ಸಾಧ್ಯವಾಗುತ್ತದೆ.