ಬೆಂಗಳೂರು : ರಾಜ್ಯದಲ್ಲಿ ಯುವಜನತೆಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಭಾರಿ ಹೂಡಿಕೆ ಮಾಡುತ್ತಿದ್ದು, 1 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಲಿದೆ.
ಈ ಬಗ್ಗೆ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದ್ದು, ಕರ್ನಾಟಕ ಹೂಡಿಕೆಗೆ ವಿಪುಲ ಅವಕಾಶಗಳಿರುವ ರಾಜ್ಯವಾಗಿದೆ. ಜಾಗತಿಕ ಮಟ್ಟದ 500 ಪ್ರತಿಷ್ಠಿತ ಕಂಪೆನಿಗಳಲ್ಲಿ 400ಕ್ಕೂ ಹೆಚ್ಚು ನಮ್ಮ ರಾಜ್ಯದಲ್ಲಿದ್ದು, ಹೂಡಿಕೆದಾರ ನೆಚ್ಚಿನ ತಾಣವಾಗಿದೆ. ರಾಜ್ಯದ ಯುವ ಸಮುದಾಯಕ್ಕೆ ಉದ್ಯೋಗ ಒದಗಿಸಲು ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರ 240 ಕ್ಕೂ ಹೆಚ್ಚು ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಳ್ಳಲಿದ್ದು, 96,480 ಕೋಟಿ ಹೂಡಿಕೆ ಮಾಡಿ 1 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಮಾಹಿತಿ ನೀಡಿದ್ದಾರೆ.
ಅದೇ ರೀತಿ ರೈಲ್ವೆ ಯೋಜನೆಗಳು ಮೂಲತಃ ಕೇಂದ್ರ ಸರ್ಕಾರಕ್ಕೆ ಸೇರಿದ್ದರೂ ಕೆಲವು ಯೋಜನೆಗಳಿಗೆ ತಗಲುವ ಒಟ್ಟು ವೆಚ್ಚದಲ್ಲಿ ಶೇ. 50ರಷ್ಟು ರಾಜ್ಯ ಸರ್ಕಾರ ಭರಿಸಬೇಕಾಗುತ್ತದೆ. ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ದಾವಣಗೆರೆ ಮತ್ತು ಗದಗ-ವಾಡಿ ರೈಲ್ವೆ ಯೋಜನೆಗಳಿಗೆ ರೂ. 93.32 ಕೋಟಿ ಬಿಡುಗಡೆ ಮಾಡಲಾಗಿದೆ. ಇದಲ್ಲದೆ ಮೈಸೂರು ಮತ್ತು ರಾಯಚೂರು ವಿಮಾನ ನಿಲ್ದಾಣಗಳ ಕಾಮಗಾರಿಗಳಿಗೆ ರೂ. 57.63 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.