ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕಕ್ಕೆ ‘ಪ್ರಧಾನಿ ಮೋದಿ’ ಆಗಮಿಸುತ್ತಿದ್ದು, ರಾಜ್ಯದ 4 ಜಿಲ್ಲೆಗಳಲ್ಲಿ ಮೋದಿ ಬೃಹತ್ ಸಮಾವೇಶ ನಡೆಸಲಿದ್ದಾರೆ.
ಪ್ರಧಾನಿ ಮೋದಿ ಅವರು ಮಾರ್ಚ್ 15 ರಿಂದ 19 ರ ನಡುವೆ ಕೋಲಾರ, ಶಿವಮೊಗ್ಗ, ಬೀದರ್, ಧಾರವಾಡದಲ್ಲಿ ಸಮಾವೇಶ ನಡೆಸಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ವಿವಿಧ ಅಭಿವೃದ್ದಿ ಯೋಜನೆಗಳಿಗೂ ಸಹ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಮೂಲಗಳ ಪ್ರಕಾರ, ಮಾರ್ಚ್ 15 ರಂದು ಕೋಲಾರದಲ್ಲಿ, ಮಾರ್ಚ್ 17 ರಂದು ಶಿವಮೊಗ್ಗದಲ್ಲಿ, 18 ರಂದು ಬೀದರ್ನಲ್ಲಿ ಮತ್ತು ಮಾರ್ಚ್ 19 ರಂದು ಧಾರವಾಡದಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಮಾ.17ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾ.17ರ ಮಧ್ಯಾಹ್ನ 2 ಗಂಟೆಗೆ ಕೇರಳದಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದು ಶಿವಮೊಗ್ಗದ ಫ್ರೀಡಂಪಾರ್ಕ್ನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.