ಬೆಂಗಳೂರು: ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದು, ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡುವವರೆಗೂ ಬೋರ್ಡ್ ಪರೀಕ್ಷೆ ನಡೆಸಬಾರದು ಎಂದು ಸ್ಪಷ್ಟಪಡಿಸಿದೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೂಲಕ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ಮೌಲ್ಯಾಂಕನ ಪರೀಕ್ಷೆಯನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ.
ಮಾರ್ಚ್ 11ರಿಂದ 18ರವರೆಗೆ ನಿಗದಿಯಾಗಿದ್ದ ಪರೀಕ್ಷೆಗಳಲ್ಲಿ ಈಗಾಗಲೇ ಪ್ರಥಮ ಭಾಷೆ ಮತ್ತು ದ್ವಿತೀಯ ಭಾಷೆ ಪರೀಕ್ಷೆಗಳು ನಡೆದಿದೆ. ಕನ್ನಡ ಮತ್ತು ಇಂಗ್ಲಿಷ್ ಪರೀಕ್ಷೆಗಳು ನಡೆದಿದ್ದು, ಬುಧವಾರದಿಂದ ಮುಂದಿನ ನಾಲ್ಕು ದಿನ ನಡೆಯಬೇಕಿದ್ದ ಉಳಿದ ವಿಷಯಗಳ ಪರೀಕ್ಷೆಗಳನ್ನು ಸುಪ್ರೀಂಕೋರ್ಟ್ ಮುಂದಿನ ಆದೇಶ ಬರುವವರೆಗೆ ಮಂದೂಡಲಾಗಿದೆ.
5, 8, 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಇದರ ವಿರುದ್ಧ ಖಾಸಗಿ ಶಾಲೆಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವು. ಮೌಲ್ಯಾಂಕನ ಪರೀಕ್ಷೆಗೆ ಹೈಕೋರ್ಟ್ ಏಕ ಸದಸ್ಯಪೀಠ ತಡೆ ನೀಡಿದ್ದು, ಅದರ ವಿರುದ್ಧ ಸರ್ಕಾರ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಏಕ ಸದಸ್ಯ ಪೀಠದ ಆದೇಶ ರದ್ದು ಮಾಡಿದ್ದರಿಂದ ಸೋಮವಾರ ಮತ್ತು ಮಂಗಳವಾರ ಪರೀಕ್ಷೆ ನಡೆಸಲಾಗಿತ್ತು. ನಂತರ ಖಾಸಗಿ ಶಾಲೆಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ತಡೆಯಾಜ್ಞೆನ್ನು ನೀಡಲಾಗಿದೆ. ಹೀಗಾಗಿ ಪರೀಕ್ಷೆ ಮುಂದೂಡಲಾಗಿದ್ದು, ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕರಲ್ಲಿ ಗೊಂದಲ ಉಂಟಾಗಿದೆ.