ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಅಗತ್ಯ ಮಾಹಿತಿಗಳೊಂದಿಗೆ ಸಭೆಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾಧಿಕಾರಿ, ಬಿಬಿಎಂಪಿ, ಜಲ ಮಂಡಳಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಮಾರ್ಚ್ 5 ರಂದು ರಾಜ್ಯದ ನೀರಿನ ಸಮಸ್ಯೆ ಕುರಿತಾಗಿ ಸಿಎಂ ಸಭೆ ನಡೆಸಿದ್ದರು. ಇಂದು ಬೆಂಗಳೂರು ನಗರ ವಿಭಾಗಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ನೀರಿನ ಸಮಸ್ಯೆ ನಿವಾರಣೆಗೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲಿದ್ದಾರೆ.
ಖಾಸಗಿ ಟ್ಯಾಂಕರ್ ಮಾಲೀಕರ ಸುಲಿಗೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಮೊದಲ ಬಾರಿ ಸಿಎಂ ಸಭೆ ನಡೆಸಿದ ಬಳಿಕ ಜಿಲ್ಲಾಡಳಿತ ಸುಲಿಗೆಗೆ ಬ್ರೇಕ್ ಹಾಕಿತ್ತು. ಸಮರ್ಪಕ ನೀರು ಪೂರೈಕೆ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ.