ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ಅನಿಶ್ಚಿತತೆ ಮುಂದುವರೆದಿದೆ.
ಪರೀಕ್ಷೆ ರದ್ದಾಗುತ್ತದೆಯೇ ಅಥವಾ ನಡೆಯುತ್ತದೆಯೇ ಎಂಬುದರ ಕುರಿತಾಗಿ ಗೊಂದಲ ಮುಂದುವರೆದಿದ್ದು, ಮಕ್ಕಳು ಮತ್ತು ಪೋಷಕರ ಸ್ಥಿತಿ ಅಯೋಮಯವಾಗಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿ ಸಂಬಂಧ ಸೋಮವಾರ ವಾದ, ಪ್ರತಿವಾದ ಆಲಿಸಿದ ಪೀಠ ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸುವುದಾಗಿ ಆದೇಶಿಸಿದೆ.
5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಿದ ವಿಭಾಗೀಯಪೀಠ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.
ಈ ಹಿಂದೆ ಬೋರ್ಡ್ ಪರೀಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ತಕರಾರು ಅರ್ಜಿ ಪುರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠ ಸರ್ಕಾರದ ಎರಡು ಪ್ರತ್ಯೇಕ ಸುತ್ತೋಲೆ ರದ್ದುಪಡಿಸಿ 2024ರ ಮಾರ್ಚ್ 6ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮಾರ್ಚ್ 7ರಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಅಂದೇ ಮೇಲ್ಮನವಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು.
ಮೂಲ ಅರ್ಜಿದಾರರಾದ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಮತ್ತು ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದವು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿಭಾಗೀಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಿತ್ತು. ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ತೀರ್ಪು ನೀಡಲು ಹೈಕೋರ್ಟ್ ಗೆ ಸೂಚನೆ ನೀಡಿದ್ದು, ಅದರಂತೆ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಇದರಿಂದಾಗಿ ಪೋಷಕರು ಮಕ್ಕಳಲ್ಲಿ ಗೊಂದಲ ಮುಂದುವರೆದಿದೆ.