ನವದೆಹಲಿ : ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರನ್ನೊಳಗೊಂಡ ವಿಭಾಗೀಯ ಪೀಠವು, ಬಂಧಿತ ಸಿಎಂ ಅಧಿಕಾರದಲ್ಲಿರುವುದನ್ನು ನಿಷೇಧಿಸುವ ಕಾನೂನಿನಲ್ಲಿ ಯಾವುದೇ ನಿರ್ಬಂಧವನ್ನು ತೋರಿಸಲು ಅರ್ಜಿದಾರರು ವಿಫಲರಾಗಿದ್ದಾರೆ ಎಂದು ಹೇಳಿದರು. “ನಮಗೆ ತೋರಿಸಿ, ನಿಷೇಧ ಎಲ್ಲಿದೆ. ನೀವು ಪ್ರಚಾರ ಮಾಡುತ್ತಿರುವ ಯಾವುದೇ ಕಾನೂನು ನಿರ್ಬಂಧವನ್ನು ನಮಗೆ ತೋರಿಸಿ” ಎಂದು ಸಿಜೆ ಮೌಖಿಕವಾಗಿ ಹೇಳಿದರು.
ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಜೈಲಿನಲ್ಲಿ ಕೂತು ಅಧಿಕಾರ ನಡೆಸಬಾರದು ಅಂಥ ಯಾವ ಕಾನೂನು ಹೇಳುತ್ತದೆ’ ಎಂದು ದೆಹಲಿ ಹೈಕೋರ್ಟ್ ಪ್ರಶ್ನೆ ಮಾಡಿದೆ.
ದೆಹಲಿ ನಿವಾಸಿ ಸುರ್ಜಿತ್ ಸಿಂಗ್ ಯಾದವ್ ಎಂಬವರು ತಾವು ರೈತ ಮತ್ತು ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡು ಅರ್ಜಿ ಸಲ್ಲಿಸಿದ್ದರು. ಆರ್ಥಿಕ ಹಗರಣದ ಆರೋಪ ಹೊತ್ತಿರುವ ಮುಖ್ಯಮಂತ್ರಿಯನ್ನು ಸಾರ್ವಜನಿಕ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.
ಕೇಜ್ರಿವಾಲ್ ಪ್ರಸ್ತುತ ಇಡಿ ವಶದಲ್ಲಿದ್ದು, ಅದು ಇಂದು ಕೊನೆಗೊಳ್ಳುತ್ತದೆ. ಅವರನ್ನು ಇಂದು ನಗರದ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.