ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ನಿರಾಸೆಯಾಗಿದೆ.
ಬಿಜೆಪಿ -ಜೆಡಿಎಸ್ ಮೈತ್ರಿ ಕಾರಣ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ನಿನ್ನೆ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾದ ಕುಮಾರಸ್ವಾಮಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಏಪ್ರಿಲ್ 3ರಂದು ಮಂಡ್ಯದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಕಾಂಗ್ರೆಸ್ ನಿಂದ ಆಹ್ವಾನವಿದೆ. ನಾನು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ಸಹಾಯ ಮಾಡಿದವರ ಉಪಕಾರ ತೀರಿಸಬೇಕು ಎಂದಿದ್ದರೆ ಅವರು ತೀರ್ಮಾನ ಮಾಡಲಿ. ಸುಮಲತಾ ಅಂಬರೀಶ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ನಿರ್ಧಾರವನ್ನು ಸ್ಥಳೀಯ ಮುಖಂಡರಿಗೆ ಬಿಡುತ್ತೇವೆ. ಸ್ಥಳೀಯ ಮಟ್ಟದಲ್ಲಿ ಎಲ್ಲರೂ ಒಪ್ಪಿದಾಗ ಹೈಕಮಾಂಡ್ ಯಾರನ್ನೂ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ಸುಮಲತಾ ಅಂಬರೀಶ್ ಅವರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಮತ್ತು ಅವರ ಮಧ್ಯೆ ಮಾತಿನ ಸಮರ, ಸ್ವಾಭಿಮಾನದ ಹೆಸರಲ್ಲಿ ಅವರು ಮತಯಾಚನೆ ಮಾಡಿದ್ದಕ್ಕೆ ಬದ್ಧರಾಗಿದ್ದರೆ ಪಕ್ಷಕ್ಕೆ ಕರೆತರುವ ಬಗ್ಗೆ ಆಲೋಚನೆ ಮಾಡಬಹುದು. ಸುಮಲತಾ ಅವರ ಬದ್ಧತೆ ಬದಲಾಗದಿದ್ದರೆ ಏನು ಮಾಡಲು ಸಾಧ್ಯವಿಲ್ಲವೆಂದು ಹೇಳಿದ್ದಾರೆ.