ಬೆಂಗಳೂರು : ಭಾರತ ತಂಡದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಸಂಸದೆ ಸುಮಲತಾ ಜೊತೆ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಕ್ರಿಕೆಟಿಗ ದೊಡ್ಡ ಗಣೇಶ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ.
ದೊಡ್ಡ ಗಣೇಶ್ ಕರ್ನಾಟಕ ರಣಜಿ ತಂಡದ ಪರವಾಗಿ ಮತ್ತು ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡದ ಪರವಾಗಿ 1997ರಲ್ಲಿ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಇದೀಗ ಇವರು ಬಿಜೆಪಿ ಪಕ್ಷ ಸೇರುವ ಮೂಲಕ ರಾಜಕೀಯ ಕ್ಷೇತ್ರಕ್ಕೂ ಕಾಲಿಟ್ಟು ತಮ್ಮ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಇಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಂಡೆ. ಕನ್ನಡಿಗರ ಆಶೀರ್ವಾದ ನನ್ನ ಮೇಲೆ ಹೀಗೇ ಇರಲಿ ಎಂದು ಬಯಸುತ್ತೇನೆ ಎಂದು ದೊಡ್ಡ ಗಣೇಶ್ ಟ್ವೀಟ್ ಮಾಡಿದ್ದಾರೆ.