ಬೆಂಗಳೂರು: 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಸುಪ್ರೀಂ ಕೋರ್ಟ್ ಬೋರ್ಡ್ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ಆದೇಶ ನೀಡಿದೆ. ಈ ಬಗ್ಗೆ ಎರಡು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಏ. 23ಕ್ಕೆ ವಿಚಾರಣೆ ಮುಂದೂಡಿದೆ.
ಈ ಬಗ್ಗೆ ಕಾನೂನು ಸಲಹೆ ಪಡೆದು ಶಿಕ್ಷಣ ಇಲಾಖೆ ಮುಂದಿನ ನಿರ್ಧಾರ ಕೈಗೊಳ್ಳಲಿದೆ. ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ತೀರ್ಪು ಮತ್ತು ಪರೀಕ್ಷೆ ನಡೆಸಿ ಸೋಮವಾರ ಪ್ರಕಟಿಸಿದ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಈ ಆದೇಶದಿಂದ ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗಿದ್ದು, ಗೊಂದಲ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಇದರಿಂದ ಬೋರ್ಡ್ ಪರೀಕ್ಷೆ ವಿಚಾರದಲ್ಲಿ ಇಲಾಖೆಯ ನಡೆಗೆ ಹಿನ್ನಡೆಯಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಕೂಡ ಗೊಂದಲಕ್ಕೆ ಸಿಲುಕಿದ್ದಾರೆ. ಈಗಾಗಲೇ ಪರೀಕ್ಷೆ ಪೂರ್ಣಗೊಂಡು ಸೋಮವಾರ ಫಲಿತಾಂಶ ಕೂಡ ಪ್ರಕಟವಾಗಿದೆ. 2023- 24ನೇ ಸಾಲಿನ ಶೈಕ್ಷಣಿಕ ವರ್ಷ ಪೂರ್ಣಗೊಂಡಿದ್ದು, ಮಂಗಳವಾರದಿಂದ ಬೇಸಿಗೆ ರಜೆ ಕೂಡ ಶುರುವಾಗಲಿದೆ. ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.