
ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿಗಳಿಗೆ ಆರೋಪ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ರಕ್ಷಿಸುವ ಉದ್ದೇಶದಿಂದಲೇ ಅವರ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ ಎಂದು ಸಿಬಿಐ ಮತ್ತು ಶಾಸಕ ಯತ್ನಾಳ್ ಅವರ ಪರ ವಕೀಲರು ಹೈಕೋರ್ಟ್ ನಲ್ಲಿ ಬಲವಾದ ವಾದ ಮಂಡಿಸಿದ್ದಾರೆ.
ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಪಡೆದು ಕಾಂಗ್ರೆಸ್ ಸರ್ಕಾರ 2023ರ ನವೆಂಬರ್ 8ರಂದು ಹೊರಡಿಸಿದ ಆದೇಶ ರದ್ದು ಮಾಡುವಂತೆ ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಮತ್ತು ಉಮೇಶ ಎಂ. ಅಡಿಗ ಅವರಿಂದ ವಿಭಾಗೀಯ ಪೀಠದಲ್ಲಿ ನಡೆದಿದೆ.
ಸಿಬಿಐ ಪರ ವಕೀಲರಾದ ಪಿ. ಪ್ರಸನ್ನ ಕುಮಾರ್, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಒಮ್ಮೆ ಸಿಬಿಐ ತನಿಖೆಗೆ ನೀಡಿದ ಅನುಮತಿ ಹಿಂಪಡೆಯಲು ಅವಕಾಶವಿಲ್ಲ. ಹಾಗಾಗಿ ಸರ್ಕಾರದ ಕ್ರಮ ಕಾನೂನುಬಾಹಿರವಾಗಿದೆ. ಡಿ.ಕೆ. ಶಿವಕುಮಾರ್ ಅವರನ್ನು ರಕ್ಷಣೆ ಮಾಡುವ ಉದ್ದೇಶದಿಂದಲೇ ಸರ್ಕಾರ ಸುಪ್ರೀಂಕೋರ್ಟ್ ಮತ್ತು ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದು ಹೇಳಿದ್ದಾರೆ.
ಯತ್ನಾಳ್ ಪರವಾಗಿ ವಾದ ಮಂಡಿಸಿದ ವಕೀಲ ವೆಂಕಟೇಶ ಪಿ. ದಳವಾಯಿ, ಸರ್ಕಾರ ಆದೇಶ ಪ್ರಶ್ನಿಸುವ ಅವಕಾಶ ಅರ್ಜಿದಾರರಿಗೆ ಇದೆ. 2023ರ ನವೆಂಬರ್ 28 ರಂದು ಸಿಬಿಐಗೆ ನೀಡಿದ್ದ ಅನುಮತಿಯನ್ನು ಸರ್ಕಾರ ಹಿಂಪಡೆದುಕೊಂಡ ಕ್ರಮ ಪ್ರಶ್ನಿಸಿ ಡಿಸೆಂಬರ್ 5 ರಂದು ಯತ್ನಾಳ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 22 ರಂದು ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಸರ್ಕಾರ ವರ್ಗಾಯಿಸಿದೆ. ಪ್ರಕರಣವನ್ನು ಸಿಬಿಐಗೆ ವಹಿಸಿದ ಬಳಿಕ ಹಿಂಪಡೆಯಲು ಸಾಧ್ಯವಿಲ್ಲ. ಹಾಗಾಗಿ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಡಿ.ಕೆ. ಶಿವಕುಮಾರ್ ಪರ ಹಾಜರಿದ್ದ ಹಿರಿಯ ವಕೀಲ ಉದಯ ಹೊಳ್ಳ, ವಾದ ಮಂಡಿಸಲು ಕಾಲಾವಕಾಶ ಕೋರಿದ್ದು, ಇದಕ್ಕೆ ಸಮ್ಮತಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 27ಕ್ಕೆ ಮುಂದೂಡಿದೆ.