ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಹಾಗೂ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನೊಂದು ದಿನ ಬಾಕಿ ಇದೆ. ಮತದಾನಕ್ಕಾಗಿ ಚುನಾವಣ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ದಕ್ಷಿಣದ ಜಿಲ್ಲೆಗಳ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯದ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಈ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಏಪ್ರಿಲ್ 26ರಂದು ಕರ್ನಾಟಕದ ಜೊತೆ ಅಸ್ಸಾಂ, ಬಿಹಾರ, ಛತ್ತೀಸ್ ಗಢ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ರಾಜಸ್ಥಾನ, ತ್ರಿಪುರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ ಮತದಾನ ನಡೆಯಲಿದೆ.
ಮೇ 7ರಂದು ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯಲಿದೆ. ಇನ್ನು ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.