ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ, ತಮ್ಮ ವಿರುದ್ದ ದೂರು ದಾಖಲಾಗುವ ಮುನ್ನವೇ ವಿದೇಶಕ್ಕೆ ತೆರಳಿದ್ದರು. ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ಅವರು ತೆರಳಿದ್ದಾರೆಂದು ಹೇಳಲಾಗಿತ್ತು.
ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದ್ದು, ಈ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ತನಿಖಾ ತಂಡದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.
ಆದರೆ ವಿದೇಶಕ್ಕೆ ತೆರಳಿರುವ ಪ್ರಜ್ವಲ್ ರೇವಣ್ಣ ಸಕಾಲಕ್ಕೆ ವಿಚಾರಣೆಗೆ ಹಾಜರಾಗುವುದು ಅನುಮಾನ ಎಂಬ ಮಾತುಗಳ ಮಧ್ಯೆ ಪ್ರಜ್ವಲ್ ರೇವಣ್ಣ, ಸಾಮಾಜಿಕ ಜಾಲತಾಣದ ಮೂಲಕ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವಿದೇಶದಿಂದಲೇ ಪೋಸ್ಟ್ ಹಾಕಿರುವ ಅವರು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ.