ಮಂಗಳೂರು: ಮಂಗಳೂರು ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ತುಂಬೆಯಲ್ಲಿ ಜಲಮಟ್ಟ ಇಳಿಕೆಯಾಗುತ್ತಿದ್ದು, ಮೇ 5ರಿಂದ ಮಂಗಳೂರಿನಲ್ಲಿ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ.
ದಿನ ಬಿಟ್ಟು ದಿನ ಅಂದರೆ ಎರಡು ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲು ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್ ಅಧ್ಯಕ್ಷತೆಯಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಲಭ್ಯವಿರುವ ನೀರನ್ನು ಮಂಗಳೂರು ಉತ್ತರ ಮತ್ತು ಮಂಗಳೂರು ದಕ್ಷಿಣ ಭಾಗಗಳಿಗೆ ದಿನ ಬಿಟ್ಟು ದಿನ ಪೂರೈಕೆ ಮಾಡಲು ತೀರ್ಮಾನಿಸಲಾಗಿದೆ.
ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಲು, ಅನಗತ್ಯ ಬಳಕೆಗೆ ಕಡಿವಾಣ ಹಾಕಲು ಸೂಚನೆ ನೀಡಲಾಗಿದೆ. ಅನಗತ್ಯವಾಗಿ ನೀರು ಪೋಲು ಮಾಡುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ.