ನವದೆಹಲಿ: ಉತ್ತರ ಪ್ರದೇಶದ ಅಲೀಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಕಳೆದ ವರ್ಷ ಬೀದಿ ನಾಯಿಗಳ ದಾಳಿಯಿಂದ 65 ವರ್ಷದ ವೃದ್ಧರೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(NHRC) ತಿಳಿಸಿದೆ.
ಮೃತ ವ್ಯಕ್ತಿಯ ಕುಟುಂಬಸ್ಥರಿಗೆ 7.5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನಿರ್ದೇಶನ ನೀಡಿದೆ. 8 ವಾರಗಳ ಒಳಗೆ ಹಣ ಪಾವತಿಸಿದ ದಾಖಲೆಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.
ಕಳೆದ ವರ್ಷ ಏಪ್ರಿಲ್ ನಲ್ಲಿ ಅಲೀಗಢ ಮುಸ್ಲಿಂ ವಿವಿ ಆವರಣದ ಪಾರ್ಕ್ ನಲ್ಲಿ ಸಫ್ತರ್ ಅಲಿ ಖಾನ್(65) ಎಂಬುವರು ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 7.5 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಲಾಗಿದೆ