ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾದ ನನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿಯನ್ನು ಹಬ್ಬಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ನಾನು ಚುನಾವಣಾ ಕಣದಿಂದ ರಾಘವೇಂದ್ರರಿಗೆ ಬೆಂಬಲಿಸಿ ಹಿಂದೇ ಸರಿಯುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಬಿಜೆಪಿಯಲ್ಲಿದ್ದಾಗ ಪತ್ರಿಕಾಗೋಷ್ಠಿ ಮಾಡಿದ ಪೋಟೋಗಳನ್ನು ಹಿಂದೆ ರಾಘವೇಂದ್ರರಿಗೆ ಬೆಂಬಲಿಸಿ ಎಂದು ಹೇಳಿದ್ದನ್ನು ಈಗ ವಾಟ್ಸಾಪ್ ಪೇಸ್‌ಬುಕ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿ ಹಬ್ಬಿಸಿ ಮತದಾರರಲ್ಲಿ ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ.
ಇದು ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿದೆ. ಸಂಸದ ಬಿ.ವೈ.ರಾಘವೇಂದ್ರರಿಗೆ ತಾನು ಸೋಲುವುದು ಖಚಿತ ಎಂದು ತಿಳಿದಮೇಲೆ ನನ್ನ ಮೇಲೆ ಷಡ್ಯಂತ್ರ ರೂಪಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸಂಜೆ ಜಿಲ್ಲಾ ರಕ್ಷಣಾಧಿಕಾರಿಗಳಿಗೂ ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೆ.ಇ. ಕಾಂತೇಶ್, ಜಿ.ವಿಶ್ವಾಸ್, ಮೋಹನ್, ಉಮೇಶ್ ಆರಾಧ್ಯ ಮತ್ತಿತರರು ಇದ್ದರು.